ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲೀಯರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣು ದೇವ್ ಸಾ ಹೇಳಿದ್ದಾರೆ.

ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.

"ಗಂಗಲೂರು ಪ್ರದೇಶದಲ್ಲಿ ಗುಂಡಿನ ದಾಳಿ ಕೊನೆಗೊಂಡಿದೆ. ಇದುವರೆಗೆ 12 ನಕ್ಸಲೀಯರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಮ್ಮ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಪಡೆದಿವೆ" ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ಮತ್ತು ಹಿರಿಯ ಅಧಿಕಾರಿಗಳನ್ನು ಅವರು ಅಭಿನಂದಿಸಿದರು.

ಕಳೆದ ಒಂದು ತಿಂಗಳಲ್ಲಿ ಛತ್ತೀಸ್‌ಗಢದಲ್ಲಿ ನಕ್ಸಲೀಯರಿಗೆ ಇದು ಮೂರನೇ ಭಾರಿ ಹಿನ್ನಡೆಯಾಗಿದೆ. ಏಪ್ರಿಲ್ 16 ರಂದು ಕಂಕೆ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 29 ನಕ್ಸಲೀಯರು ಕೊಲ್ಲಲ್ಪಟ್ಟರು, ಏಪ್ರಿಲ್ 30 ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಕೊಲ್ಲಲ್ಪಟ್ಟರು.

ಈ ವರ್ಷ ಇದುವರೆಗೆ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ 103 ನಕ್ಸಲೀಯರು ಹತರಾಗಿದ್ದಾರೆ.