ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಮಂಗಳವಾರ ಹಾಸನ ಲೋಕಸಭೆ ಕ್ಷೇತ್ರದಲ್ಲಿ 17,108 ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ.

ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಶ್ರೇಯಸ್ ಪಟೇಲ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, 33 ವರ್ಷದ ರೇವಣ್ಣ 4,29,980 ಮತಗಳನ್ನು ಪಡೆದರೆ, ಪಟೇಲ್ 4,47,088 ಮತಗಳನ್ನು ಪಡೆದಿದ್ದಾರೆ.

ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡರ ಮೊಮ್ಮಗ ರೇವಣ್ಣ ಸ್ಪರ್ಧಿಸಿದ್ದರು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರಬಿದ್ದಿದ್ದರಿಂದ, ಹಾಸನದಲ್ಲಿ ಏಪ್ರಿಲ್ 26 ರಂದು ಚುನಾವಣೆ ನಡೆದ ನಂತರ ಜೆಡಿಎಸ್ ಪಕ್ಷದಿಂದ ಅವರನ್ನು ಅಮಾನತುಗೊಳಿಸಿತ್ತು.

ಅವರು ಪ್ರಸ್ತುತ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿದ್ದಾರೆ.